ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದ ಕಾಂಗ್ರೆಸ್ ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ. ಅನುಮತಿ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಸೋಮಶೇಖರ್ ನೇತೃತ್ವದ ವಿಭಾಗೀಯ ಪೀಠ ತೀರ್ಪು ಕಾಯ್ದಿರಿಸಿದೆ. ಅರ್ಜಿಗಳ ಕುರಿತು ಕೆಲ ತಿಂಗಳ ಹಿಂದೆಯೇ ನ್ಯಾಯಾಲಯವು ಆದೇಶ ಕಾಯ್ದಿರಿಸಿತ್ತು. ಆದರೆ, ಕೆಲವು ವಿಚಾರಗಳಿಗೆ ಸ್ಪಷ್ಟನೆ ಬಯಸಿ ಪ್ರಕರಣವನ್ನು ವಿಚಾರಣೆಗೆ ನಿಗದಿಪಡಿಸಿತ್ತು.