ಭಾರತ-ಬಾಂಗ್ಲಾದೇಶ್ ನಡುವಣ ಟೆಸ್ಟ್ ಸರಣಿ ಮುಕ್ತಾಯದ ಬೆನ್ನಲ್ಲೇ ಮೂರು ಪಂದ್ಯಗಳ ಟಿ20 ಸರಣಿ ಶುರುವಾಗಲಿದೆ. ಈ ಸರಣಿಗೆ ಟೀಮ್ ಇಂಡಿಯಾ ವಿಕೆಟ್ ಕೀಪರ್ಗಳಾಗಿ ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ಆಯ್ಕೆಯಾಗಲಿದ್ದಾರೆ ಎಂದು ವರದಿಯಾಗಿದೆ. ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಮುಂಬರುವ ಟಿ20 ಸರಣಿಯಿಂದ ಹೊರಗುಳಿಯಲಿದ್ದು, ಅವರ ಬದಲಿಗೆ ಇಶಾನ್ ಕಿಶನ್ಗೆ ಚಾನ್ಸ್ ಸಿಗಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಇದಕ್ಕೂ ಮುನ್ನ ಟಿ20 ವಿಶ್ವಕಪ್ನಲ್ಲಿ ರಿಷಭ್ ಪಂತ್ ಮೊದಲ ವಿಕೆಟ್ ಕೀಪರ್ ಆಗಿದ್ದರೆ, ಸಂಜು ಸ್ಯಾಮ್ಸನ್ ಎರಡನೇ ವಿಕೆಟ್ ಕೀಪರ್ ಆಗಿ ಆಯ್ಕೆಯಾಗಿದ್ದರು. ಅಲ್ಲದೆ ಶ್ರೀಲಂಕಾ ವಿರುದ್ಧದ ಸರಣಿಯಲ್ಲೂ ಸ್ಯಾಮ್ಸನ್ ಮುಂದುವರೆದಿದ್ದರು. ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ ಟಿ20 ಸರಣಿಯಲ್ಲೂ ಸಂಜು ಸ್ಯಾಮ್ಸನ್ಗೆ ಅವಕಾಶ ಸಿಗಲಿದೆ ಎಂದು ತಿಳಿದು ಬಂದಿದೆ.
ಭಾರತ ತಂಡವು ಬಾಂಗ್ಲಾದೇಶ್ ವಿರುದ್ಧದ ಸರಣಿಯ ಬಳಿಕ ನ್ಯೂಝಿಲೆಂಡ್ ವಿರುದ್ಧ ಟೆಸ್ಟ್ ಸರಣಿ ಆಡಬೇಕಿದೆ. ಈ ಸರಣಿಯು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಕಾರಣದಿಂದಾಗಿ ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದು. ಅಲ್ಲದೆ ಈ ಸರಣಿಯ ಬಳಿಕ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯನ್ನು ಸಹ ಆಡಬೇಕಿದೆ.
ಈ ಎಲ್ಲಾ ಸರಣಿಗಳನ್ನು ಗಮನದಲ್ಲಿರಿಸಿ ಬಾಂಗ್ಲಾದೇಶ್ ವಿರುದ್ಧದ ಟಿ20 ಸರಣಿಯ ವೇಳೆ ಕೆಲ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗುತ್ತಿದೆ. ಹೀಗಾಗಿ ರಿಷಭ್ ಪಂತ್ ಕೂಡ ಬಾಂಗ್ಲಾ ವಿರುದ್ಧದ 3 ಪಂದ್ಯಗಳ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ತಿಳಿದು ಬಂದಿದೆ.
ಭಾರತ ಮತ್ತು ಬಾಂಗ್ಲಾ ಟಿ20 ಸರಣಿ ಯಾವಾಗ ಶುರು?
ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಟೆಸ್ಟ್ ಸರಣಿಯ 2ನೇ ಪಂದ್ಯವು ಸೆಪ್ಟೆಂಬರ್ 27 ರಿಂದ ಶುರುವಾಗಲಿದೆ. ಇದಾದ ಬಳಿಕ ಅಕ್ಟೋಬರ್ 7 ರಿಂದ ಟಿ20 ಸರಣಿ ಆರಂಭವಾಗಲಿದ್ದು, ಮೊದಲ ಪಂದ್ಯವು ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆಯಲಿದೆ. ಇನ್ನು ಅಕ್ಟೋಬರ್ 10 ರಂದು ಜರುಗಲಿರುವ 2ನೇ ಪಂದ್ಯಕ್ಕೆ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಹಾಗೆಯೇ ಈ ಸರಣಿಯ ಮೂರನೇ ಪಂದ್ಯವು ಅಕ್ಟೋಬರ್ 13 ರಂದು ಹೈದರಾಬಾದ್ನಲ್ಲಿ ನಡೆಯಲಿದೆ.