ಇಸ್ಲಾಮಾಬಾದ್: ಪಾಕಿಸ್ತಾನದ ಕರಾಚಿ ವಿಮಾನ ನಿಲ್ದಾಣದ ಹೊರಗೆ ಭಾನುವಾರ ತಡರಾತ್ರಿ ಸ್ಫೋಟ ಸಂಭವಿಸಿದ್ದು ಇಬ್ಬರು ಮೃತಪಟ್ಟು, ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ ತೈಲ ಟ್ಯಾಂಕರ್ ಸ್ಫೋಟಗೊಂಡಿದೆ ಎನ್ನಲಾಗಿದೆ. ಆದರೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ ಎಂದು ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ ಅಜ್ಫರ್ ಮಹೇಸರ್ ಹೇಳಿದ್ದಾರೆ. ವಿದೇಶಿ ಪ್ರಜೆಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಚೀನಾದ ಸಾವಿರಾರು ಮಂದಿ ಕಾರ್ಮಿಕರು ಪಾಕಿಸ್ತಾನದಲ್ಲಿದ್ದಾರೆ. ಅವರನ್ನು ಗುರಿಯಾಗಿಸಿ ಈ ದಾಳಿ ನಡೆಸಲಾಗಿದೆ ಎಂದೂ ವರದಿ ಆಗಿವೆ. ಸ್ಫೋಟದ ಶಬ್ಧವು ತೀವ್ರವಾಗಿತ್ತು ಎಂದು ವಿಮಾನ ನಿಲ್ದಾಣದ ಸಿಬ್ಬಂದಿಯೊಬ್ಬರು ಕಳವಳ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳದಲ್ಲಿ ಹೊಗೆ ದಟ್ಟವಾಗಿದ್ದು ಅಗ್ನಿಶಾಮಕದಳ ಮತ್ತು ಪೊಲೀಸರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸ್ಫೋಟಕ್ಕೆ ನಿರ್ದಿಷ್ಟ ಕಾರಣವೇನೆಂದು ಪತ್ತೆ ಹಚ್ಚಲು ತನಿಖೆ ನಡೆಸಲಾಗುತ್ತಿದೆ. ಗಾಯಗೊಂಡವರಲ್ಲಿ ಪೊಲೀಸರು ಸೇರಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.