ಕೇಂದ್ರ ಚುನಾವಣಾ ಆಯೋಗವು ಇಂದು ಮಧ್ಯಾಹ್ನ ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಪ್ರಕಟಿಸುವ ನಿರೀಕ್ಷೆ ಇದೆ. ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.
ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಕೇಂದ್ರಾಡಳಿತ ಪ್ರದೇಶದಲ್ಲಿ ಪಕ್ಷವು ಸಂಪೂರ್ಣ ಬಹುಮತವನ್ನು ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಪ್ರದೇಶವು ಐದು ವರ್ಷಗಳಿಂದ ಚುನಾಯಿತ ಶಾಸಕಾಂಗವನ್ನು ಹೊಂದಿಲ್ಲ.
ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಯನ್ನು ಘೋಷಿಸಲು ಚುನಾವಣಾ ಆಯೋಗದ ನಿರ್ಧಾರ ಸ್ವಾಗತಾರ್ಹ, ನಾನು ಚುನಾವಣೆಗೆ ಸ್ಪರ್ಧಿಸುತ್ತೇನೆ. ನಾವೇ ಬಹುಮತ ಪಡೆಯುತ್ತೇವೆ ಎಂದು ಅಬ್ದುಲ್ಲಾ ವಿಶ್ವಾಸ ವ್ಯಕ್ತಪಡಿಸಿದರು. ಸಂಭಾವ್ಯ ಚುನಾವಣಾ ಪೂರ್ವ ಮೈತ್ರಿಗೆ ಸಂಬಂಧಿಸಿದಂತೆ, ಚರ್ಚೆಗಳನ್ನು ನಡೆಸಲಾಗುವುದು ಎಂದು ಅಬ್ದುಲ್ಲಾ ಹೇಳಿದರು.
ನಾವು ಯಾವುದೇ ಪಕ್ಷದೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುತ್ತೇವೆಯೇ ಅಥವಾ ಇಲ್ಲವೇ ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ, ನಾವು ಆ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದರು. ಈ ವರ್ಷದ ಆರಂಭದಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದ 86 ವರ್ಷದ ಮಾಜಿ ಮುಖ್ಯಮಂತ್ರಿ, ವಿಧಾನಸಭೆ ಚುನಾವಣೆಯಲ್ಲಿ ಭಾಗವಹಿಸುವ ಬದ್ಧತೆಯನ್ನು ಪುನರುಚ್ಚರಿಸಿದರು.