ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಮತ್ತು ಖನ್ಯಾರ್ನಲ್ಲಿ ಶನಿವಾರ ನಡೆದ ಎರಡು ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ಭದ್ರತಾ ಪಡೆಗಳು ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಶನಿವಾರ ಬೆಳಗ್ಗೆ ಶ್ರೀನಗರದ ಖನ್ಯಾರ್ ಪ್ರದೇಶದಲ್ಲಿ ನಡೆದ ಎನ್ಕೌಂಟರ್ನಲ್ಲಿ ಲಷ್ಕರ್-ಎ-ತೊಯ್ಬಾದ (ಎಲ್ಇಟಿ) ಪಾಕಿಸ್ತಾನಿ ಉಗ್ರನನ್ನು ಹತ್ಯೆ ಮಾಡಲಾಗಿದೆ. ನಾಲ್ವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ..
ಈ ಪ್ರದೇಶದಲ್ಲಿ ಉಗ್ರರು ಇರುವ ಖಚಿತ ಮಾಹಿತಿ ದೊರೆತ ನಂತರ ಭದ್ರತಾ ಪಡೆಗಳು ಖನ್ಯಾರ್ನ ಜನನಿಬಿಡ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಇದು ಎನ್ ಕೌಂಟರ್ ಗೆ ತಿರುಗಿದ್ದು, ಉಗ್ರರು ಗುಂಡಿನ ದಾಳಿ ನಡೆಸಿದ್ದರಿಂದ ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದಾರೆ.
ಕಾರ್ಯಾಚರಣೆ ವೇಳೆ ಉಗ್ರರು ಅಡಗಿದ್ದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಆಕಾಶದಲ್ಲಿ ದಟ್ಟವಾದ ಬೂದು ಹೊಗೆ ಕಾಣಿಸಿಕೊಂಡಿದೆ. ಇನ್ನೂ ನಡೆಯುತ್ತಿರುವ ಎನ್ಕೌಂಟರ್ನಲ್ಲಿ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ. ಹತ್ಯೆಯಾದ ಉಗ್ರ ಪಾಕಿಸ್ತಾನಿಯಾಗಿದ್ದು, ಎಲ್ಇಟಿಗೆ ಸೇರಿದವನು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಎನ್ಕೌಂಟರ್ನಲ್ಲಿ ಇಬ್ಬರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಯೋಧರು ಮತ್ತು ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಅವರನ್ನು ಸೇನೆಯ 92 ಮೂಲ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮತ್ತೊಂದು ಎನ್ ಕೌಂಟರ್ ನಲ್ಲಿ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಶಾಂಗಸ್-ಲರ್ನೂ ಪ್ರದೇಶದ ಹಲ್ಕನ್ ಗಲಿ ಬಳಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಖಚಿತ ಮಾಹಿತಿ ಪಡೆದ ನಂತರವೇ ಭದ್ರತಾ ಪಡೆಗಳು ಇಂತಹ ಕ್ರಮ ಕೈಗೊಂಡಿದ್ದಾರೆ. ಇದೊಂದು ಗಮನಾರ್ಹ ಸಾಧನೆಯಾಗಿದೆ ಎಂದು ಐಜಿಪಿ ವಿಕೆ ಬಿರ್ಡಿ ತಿಳಿಸಿದ್ದಾರೆ.