- ಕಮಲಾ ಹಂಪನಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಕೆ. ಗೋಪಾಲಯ್ಯ
- ನಾಡೋಜ ಸೇರಿದಂತೆ ವಿವಿಧ ಪ್ರತಿಷ್ಠಿತ ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿದ್ದರು
ಕನ್ನಡದ ಸಾಹಿತ್ಯ ಲೋಕದ ಹಿರಿಯ ಲೇಖಕರು ಹಾಗೂ ಸಾಹಿತಿ ಡಾ.ಕಮಲಾ ಹಂಪನಾ ಅವರ ನಿಧನಕ್ಕೆ ಮಾಜಿ ಸಚಿವರು ಹಾಗೂ ಶಾಸಕರಾದ ಕೆ, ಗೋಪಾಲಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಡಾ. ಕಮಲಾ ಹಂಪನಾ ಅವರು ಕನ್ನಡ ಸಾಂಸ್ಕೃತಿಕ ಲೋಕದ ಆಸ್ತಿ, ಕಥೆ, ಕಾದಂಬರಿ, ವಿಮರ್ಶೆ, ವೈಚಾರಿಕ ಸಾಹಿತ್ಯ, ಶಿಶು ಸಾಹಿತ್ಯ, ಅನುವಾದ ಹಾಗೂ ಸಂಶೋಧನಾ ಸಾಹಿತ್ಯ ಹೀಗೆ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಅಮೂಲ್ಯವಾದ ಕೃತಿಗಳನ್ನು ರಚಿಸಿದ್ದರು. ಡಾ. ಕಮಲಾ ಹಂಪನಾ ಅವರು ಮಹಾರಾಣಿ ಕಾಲೇಜಿ ನಲ್ಲಿ ಅಧ್ಯಾಪಕರಾಗಿ ವೃತ್ತಿ ಆರಂಭಿಸಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾಗಿ ಹಾಗೂ ಮೈಸೂರು ವಿಶ್ವವಿದ್ಯಾಲಯ, ಹಂಪಿ ವಿಶ್ವವಿದ್ಯಾಲಯ ಮುಂತಾದ ಕಡೆಗಳಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿ ಬಹಳ ದೊಡ್ಡ ಶಿಷ್ಯ ಪರಂಪರೆಯನ್ನು ಹೊಂದಿದ್ದಾರೆ.
71ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಅವರು ನಾಡೋಜ ಸೇರಿದಂತೆ ವಿವಿಧ ಪ್ರತಿಷ್ಠಿತ ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿದ್ದರು. ಅವರ ಇಡೀ ಕುಟುಂಬ ಕನ್ನಡ ಸಾಂಸ್ಕೃತಿಕ ಲೋಕಕ್ಕೆ ಅನನ್ಯವಾದ ಕೊಡುಗೆಯನ್ನ ನೀಡುತ್ತಿದೆ. ಭಗವಂತ ಅವರ ಕುಟುಂಬಕ್ಕೆ ಅವರ ಅಗಲಿಕೆಯ ಶಕ್ತಿಯನ್ನು ಮತ್ತು ದುಃಖವನ್ನು ಭರಿಸುವ ಶಕ್ತಿ ನೀಡಲಿ, ಕನ್ನಡ ಸಾಂಸ್ಕೃತಿಕ ಲೋಕ ಅವರನ್ನು ಸದಾ ಗೌರವಪೂರ್ವಕವಾಗಿ ನೆನಪಿಸಿಕೊಳ್ಳುತ್ತದೆ ಎಂದು ಕೆ, ಗೋಪಾಲಯ್ಯ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.