ಮುಂಬೈನ ಹಲವು ಪ್ರದೇಶಗಳಲ್ಲಿ ಮಳೆ ಮುಂದುವರೆದಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಮಳೆ ಸಂಬಂಧಿತ ಅವಘಡಗಳಲ್ಲಿ ಸೋಮವಾರ ರಾತ್ರಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ವ್ಯಾಪಕವಾಗಿ ಮಳೆಯಾಗುತ್ತಿರುವ ಪ್ರದೇಶಗಳಲ್ಲಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಹವಾಮಾನ ಇಲಾಖೆಯು ಮುಂದಿನ 24 ಗಂಟೆಗಳಲ್ಲಿ ಹೆಚ್ಚು ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸ್ಥಳೀಯ ಆಡಳಿತವು ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿದೆ. ಕೆಲವು ಪ್ರದೇಶಗಳ ಸರ್ಕಾರಿ ಕಚೇರಿಗಳಿಗೂ ರಜೆ ನೀಡಲಾಗಿದೆ. ರೈಲ್ವೆ ಇಲಾಖೆಯು ಇಂದು ಹಲವು ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಿದೆ.
ಸೋಮವಾರ 30 ಸೆಂ.ಮೀಗೂ ಹೆಚ್ಚು ಪ್ರಮಾಣದ ಮಳೆಯಾಗಿದ್ದು, ರಸ್ತೆ ಸಂಚಾರ, ವಿಮಾನ ಹಾಗೂ ಉಪನಗರ ರೈಲು ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿ ಹಳಿಗಳು ಮುಚ್ಚಿಹೋಗುವಷ್ಟು ನೀರು ನಿಂತಿತ್ತು. ಸುಮಾರು 50 ವಿಮಾನಗಳ ಹಾರಾಟ ಕೂಡ ರದ್ದಾಗಿತ್ತು.