ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.ಈ ಕುರಿತು ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಹೆಚ್ ಡಿಕೆ, ಮುಡಾ ಹಗರಣ ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು ಇದರಲ್ಲಿ ಸಿಎಂ ಕುಟುಂಬದ ಹೆಸರು ಕೇಳಿಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹೆಚ್ ಡಿಕೆ ವಾಗ್ದಾಳಿ ನಡೆಸಿದ್ದಾರೆ.
ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲಾಗಿದೆ. ಇಷ್ಟು ದಿನ ಹೊರಗೆ ಬಾರದ ಹಗರಣ ಈಗ ಬಂದಿದ್ದು ಯಾಕೆ ? ಇದರ ಹಿಂದೆ ಸಿಎಂ ಕುರ್ಚಿ ಮೇಲೆ ಟವಲ್ ಹಾಕಿರುವವರ ಪಾತ್ರ ಇದೆ. ಬಿಜೆಪಿಯವರು ಹೋರಾಟ ಮಾಡುತ್ತಿದ್ದಾರೆ ಅಷ್ಟೆ. ಆದರೆ ಹಗರಣ ಆಚೆ ಬರಲು ಕಾಂಗ್ರೆಸ್ನವರೇ ಒಳಗೆ ಕುಮ್ಮಕ್ಕು ಕೊಡುತ್ತಿದ್ದಾರೆ. ಸಿಡಿ ಫ್ಯಾಕ್ಟರಿ ಕ್ಲೋಸ್ ಆಗಿದೆ, ಮುಡಾ ವಿಚಾರ ಶುರುವಾಗಿದೆ. ಈ ಬಗ್ಗೆ ನನಗೆ ಮಾಹಿತಿ ಇದೆ ಎಂದು ಸ್ಟೋಟಕ ಹೇಳಿಕೆಯನ್ನ ಕುಮಾರಸ್ವಾಮಿ ಅವರು ನೀಡಿದ್ದಾರೆ.
ಮುಖ್ಯಮಂತ್ರಿ ಪತ್ನಿಗೆ ಆ ಜಾಗ ಹೇಗೆ ಬಂತು ಅಂತಲೂ ನನಗೆ ಗೊತ್ತಿದೆ. 62 ಕೋಟಿ ರೂಪಾಯಿ ಪರಿಹಾರ ಕೇಳುವ ಸಿಎಂ ಭೂಮಿ ಕಳೆದುಕೊಂಡು ಬೀದಿಯಲ್ಲಿ ನಿಂತಿರುವ ರೈತರಿಗೂ ಪರಿಹಾರ ಕೊಡಿಸಲಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದರು.
ಸಿಎಂ ಪತ್ನಿಗೆ 14 ಸೈಟ್ ಹಂಚಿಕೆ ವಿಚಾರವಾಗಿ ಮಾತನಾಡಿ, ಕಾನೂನು ಸಲಹೆಗಾರ ಈಗ ಎಂಎಲ್ಎ ಆಗಿದ್ದಾರೆ. ಅವರು ಸಿಎಂ ಪರ ಸುಧೀರ್ಘವಾಗಿ ಮಾತನಾಡಿದ್ದಾರೆ, 62 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದಿದ್ದಾರೆ. ಆದರೆ ಹಲವು ಅಭಿವೃದ್ಧಿ ಹೆಸರಿನಲ್ಲಿ ಭೂ ಸ್ವಾಧೀನವಾಗಿದೆ. ಆ ರೈತರು ಇನ್ನೂ ಕೂಡ ಬೀದಿಯಲ್ಲಿ ಅಲೆದಾಡುತ್ತಿದ್ದಾರೆ. ಅವರಿಗೆ ರೇಟ್ ಫಿಕ್ಸ್ ಮಾಡುವಾಗ ಹೇಗೆ ಮಾಡುತ್ತೀರಾ ? ರೈತರನ್ನ ಬೀದಿಯಲ್ಲಿ ನಿಲ್ಲಿಸಿದ್ದೀರಿ ಇದು ಸರೀನಾ ? ನಿಮ್ಮ ಪತ್ನಿಯ ಹಣ ಕೇಳುತ್ತಾ ಇದ್ದೀರಲ್ಲಾ ಆ ದೇವರು ಮೆಚ್ಚುತ್ತಾನಾ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.