ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶನ ವಿಸರ್ಜನಾ ಮೆರವಣಿಗೆ ವೇಳೆ ಬುಧವಾರ ರಾತ್ರಿ ಸಂಭವಿಸಿದ ಕೋಮು ಗಲಭೆಯನ್ನು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಖಂಡಿಸಿದ್ದಾರೆ. ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿರುವುದನ್ನು ತಡೆಯಲು ವಿಫಲವಾಗಿರುವುದು ಶಾಂತಿ ಸುವ್ಯವಸ್ಥೆ ವೈಫಲ್ಯವಾಗಿರುವುದಕ್ಕೆ ಸಾಕ್ಷಿ ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸುವ ಮೂಲಕ ಕರ್ನಾಟಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿ ಸಾರ್ವಜನಿಕರು-ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದು ಪೆಟ್ರೋಲ್ ಬಾಂಬ್ ಸ್ಫೋಟಿಸಿ ತಲ್ವಾರ್ ಝಳಪಿಸುವ ದುಸ್ಸಾಹಸಕ್ಕೆ ಕೈ ಹಾಕಿರುವುದು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ವೈಫಲ್ಯವಾಗಿರುವುದಕ್ಕೆ ಸಾಕ್ಷಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಪೊಲೀಸ್ ಠಾಣೆ ಎದುರು ರಕ್ಷಣೆ ಕೊಡಿ ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದವರ ಮೇಲೆಯೇ ಆ ಕೋಮಿನ ಪುಂಡರು ದಬ್ಬಾಳಿಕೆ ನಡೆಸುತ್ತಾರೆ ಎಂದರೆ ನಾವು ಎಲ್ಲಿದ್ದೇವೆ ಎನ್ನುವ ಅನುಮಾನ ಬರುತ್ತದೆ. ಇಲ್ಲಿ ಸ್ಥಳೀಯ ಪೊಲೀಸರ ವೈಫಲ್ಯವೂ ಎದ್ದು ಕಾಣುತ್ತಿದೆ ಎಂದು ಅವರು ಟೀಕಿಸಿದ್ದಾರೆ.