ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ ನ್ಯೂಝಿಲೆಂಡ್ ತಂಡವು 255 ರನ್ಗಳಿಗೆ ಆಲೌಟ್ ಆಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು ಮೊದಲ ಇನಿಂಗ್ಸ್ನಲ್ಲಿ 259 ರನ್ ಕಲೆಹಾಕಿತ್ತು. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಕೇವಲ 156 ರನ್ಗಳಿಗೆ ಆಲೌಟ್ ಆಗಿದ್ದರು.
ಟೀಮ್ ಇಂಡಿಯಾಗೆ 359 ರನ್ಗಳ ಗುರಿ:
ಮೊದಲ ಇನಿಂಗ್ಸ್ನಲ್ಲಿನ 103 ರನ್ಗಳ ಹಿನ್ನಡೆಯೊಂದಿಗೆ ಭಾರತ ತಂಡವು ದ್ವಿತೀಯ ಇನಿಂಗ್ಸ್ನಲ್ಲಿ 359 ರನ್ಗಳ ಗುರಿ ಪಡೆದುಕೊಂಡಿದೆ. ಇನ್ನೂ ಎರಡುವರೆ ದಿನದಾಟಗಳು ಬಾಕಿಯಿದ್ದು, ಇದರೊಳಗೆ ಭಾರತ ತಂಡವು ಈ ಗುರಿ ಮುಟ್ಟಿದರೆ ಗೆಲುವು ತನ್ನದಾಗಿಸಿಕೊಳ್ಳಬಹುದು.
ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ ಪಂದ್ಯ:
ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್ನಲ್ಲಿ ಭಾರತ ತಂಡವು ಸೋಲನುಭವಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 8 ವಿಕೆಟ್ಗಳಿಂದ ಪರಾಜಯಗೊಂಡಿತ್ತು.
ಇದೀಗ ಎರಡನೇ ಪಂದ್ಯದಲ್ಲಿ ಗೆದ್ದರೆ ಮಾತ್ರ ಟೀಮ್ ಇಂಡಿಯಾ ಸರಣಿ ಆಸೆಯನ್ನು ಜೀವಂತವಿರಿಸಿಕೊಳ್ಳಬಹುದು. ಹಾಗಾಗಿ ಟೀಮ್ ಇಂಡಿಯಾ ಪಾಲಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ. ಇದೀಗ ಈ ನಿರ್ಣಾಯಕ ಪಂದ್ಯವು ಕೊನೆಯ ಇನಿಂಗ್ಸ್ನತ್ತ ಸಾಗಿದ್ದು, ಅದರಂತೆ ಭಾರತ ತಂಡವು 359 ರನ್ಗಳಿಸಿದರೆ ಸರಣಿಯಲ್ಲಿ 1-1 ಅಂತರದಿಂದ ಸಮಬಲ ಸಾಧಿಸಬಹುದು.