ಕರ್ನಾಟಕದಲ್ಲಿ ಕೈಗಾರಿಕೆಗಳು, ಕಾರ್ಖಾನೆ ಗಳು ಮತ್ತು ಇತರೆ ಸಂಸ್ಥೆಗಳ ಉದ್ಯೋಗಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ (ಕನ್ನಡಿಗರಿಗೆ) ಉದ್ಯೋಗ ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಪ್ರಶ್ನಿಸಿ ಹೈಕೋರ್ಟ್ಗೆ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಆ.7ಕ್ಕೆ ನಿಗದಿಪಡಿಸಲಾಗಿದೆ. ಈ ಕುರಿತಂತೆ ನಗರದ ಲೆಕ್ಕ ಪರಿಶೋಧಕಿ ಅರ್ಮಿತಲಕ್ಷ್ಮಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಬುಧವಾರ ಮುಖ್ಯ ನ್ಯಾಯಮೂರ್ತಿ ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಹಾಜರಾದ ಅರ್ಜಿದಾರ ಪರ ವಕೀಲರು, ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಬೇಕು ಎಂದು ಕೋರಿದರು. ಅದಕ್ಕೆ ಒಪ್ಪಿದ ನ್ಯಾಯಪೀಠ, ಆ.7ಕ್ಕೆ ಅರ್ಜಿ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿತು. ರಾಜ್ಯದ ಕೈಗಾರಿಕೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳ ಉದ್ಯೋಗಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೀಸಲಾತಿ ಕಲ್ಪಿಸುವ ಮಸೂದೆ-2024ರ ಕರಡು ನಿಯಮಗಳನ್ನು ಕಾರ್ಮಿಕ ಇಲಾಖೆ 2024ರ ಜು.11ರಂದು ಹೊರಡಿಸಿದೆ. ಈ ನಿಯಮಗಳಿಗೆ ಜು.16ರಂದು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಅಲ್ಲದೆ, ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸುವುದು ಬಾಕಿಯಿದೆ. ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಮಸೂದೆ ಸಂವಿಧಾನದ 19 (1) (ಡಿ), 19 1 (ಇ), ಜಿ ಮತ್ತು 14ನೇ ವಿಧಿಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.