ಬೆಳಗಾವಿ ನಗರದ ಹೊರ ವಲಯದಲ್ಲಿರುವ ಖಾಸಗಿ ರೆಸಾರ್ಟ್ನಲ್ಲಿ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ್ ಹಾಗೂ ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ಬಿಜೆಪಿ ಹಲವು ಅತೃಪ್ತ ನಾಯಕರು ಗೌಪ್ಯ ಸಭೆ ನಡೆಸುತ್ತಿರುವುದು ಭಾರಿ ಸಂಚಲನ ಸೃಷ್ಟಿಸಿದೆ. ರಾಜ್ಯ ಬಿಜೆಪಿಯಿಂದ ನಡೆಸಿದ ಮೈಸೂರು ಪಾದಯಾತ್ರೆ ಮುಕ್ತಾಯದ ಬೆನ್ನಲ್ಲೇ, ಪಾದಯಾತ್ರೆಯಿಂದ ಅಂತರ ಕಾಯ್ದುಕೊಂಡಿದ್ದ 10 ಕ್ಕೂ ಅಧಿಕ ಅತೃಪ್ತ ನಾಯಕರು ಬೆಳಗಾವಿಯಲ್ಲಿ ಗೌಪ್ಯ ಸಭೆ ನಡೆಸಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.
ಕಳೆದ ಎರಡು ದಿನಗಳಿಂದ ಬೆಳಗಾವಿಯಲ್ಲಿಯೇ ಬೀಡು ಬಿಟ್ಟಿರುವ ಬಸನಗೌಡ ಪಾಟೀಲ ಯತ್ನಾಳ್ ಅವರು ರಮೇಶ ಜಾರಕಿಹೊಳಿ ಅವರ ಜೊತೆಗೂಡಿ ಅತೃಪ್ತರನ್ನು ಒಟ್ಟುಗೂಡಿಸುವ ಕೆಲಸ ಮಾಡುತ್ತಿರುವುದು ಕುತೂಹಲ ಮೂಡಿಸಿದೆ. ಗೌಪ್ಯ ಸಭೆಯಲ್ಲಿ ಮಾಜಿ ಶಾಸಕ ಅರವಿಂದ ಲಿಂಬಾವಳಿ, ಮೈಸೂರು ಮಾಜಿ ಸಂಸದ ಪ್ರತಾಪ್ ಸಿಂಹ, ಚಿಕ್ಕೋಡಿ ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ, ದಾವಣಗೆರೆ ಮಾಜಿ ಸಂಸದ ಜಿ ಎಂ ಸಿದ್ದೇಶ್ವರ್, ಮಾಜಿ ಶಾಸಕ ಕುಮಾರ ಬಂಗಾರಪ್ಪ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದಾರೆ.