ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದು, ಅವರನ್ನು ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದರು. ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ , ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.
ರಾಷ್ಟ್ರಪತಿ ಅವರು ಬೆಂಗಳೂರಿನಲ್ಲಿರುವ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ವಿವಿಧ ಸೌಲಭ್ಯಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ನಂತರ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದು, ಅಲ್ಲಿ ಕೆಎಲ್ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ ಮಾಡಲಿದ್ದಾರೆ.
ಬೆಳಗ್ಗೆ 8 ಗಂಟೆಗೆ ದೆಹಲಿ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಯಾಣ ಬೆಳೆಸಿದ್ದು, ಬೆಳಗ್ಗೆ 10-50ಕ್ಕೆ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಹೆಚ್ಎಎಲ್ ವಿಮಾನ ನಿಲ್ದಾಣದಿಂದ ನೇರವಾಗಿ ನಿಮ್ಹಾನ್ಸ್ ಆಸ್ಪತ್ರೆಯ ಕಾರ್ಯಕ್ರಮಕ್ಕೆ ಆಗಮಿಸಿದ್ದು, ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ವಿವಿಧ ಸೌಲಭ್ಯಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ನಿಮ್ಹಾನ್ಸ್ ಕಾರ್ಯಕ್ರಮ ಮುಗಿಸಿ HAL ಏರ್ಪೋರ್ಟ್ಗೆ ಪ್ರಯಾಣ ಬೆಳೆಸಲಿದ್ದು, ಮಧ್ಯಾಹ್ನ 2-20ಕ್ಕೆ HAL ಏರ್ಪೋರ್ಟ್ ನಿಂದ ಬೆಳಗಾವಿಗೆ ತೆರಳಲಿದ್ದಾರೆ. ಮದ್ಯಾಹ್ನ 3-55ಕ್ಕೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ವಿಮಾನ ನಿಲ್ದಾಣದಂದ ಕೆಎಲ್ಇ ಕ್ಯಾನ್ಸರ್ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಕೆಎಲ್ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ ಮಾಡಲಿದ್ದು, ಕಾರ್ಯಕ್ರಮ ಮುಗಿಸಿ ಸಂಜೆ 5-30ಕ್ಕೆ ಬೆಳಗಾವಿ ಏರ್ಪೋರ್ಟ್ನಿಂದ ದೆಹಲಿಗೆ ವಾಪಾಸ್ಸಾಗಲಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಂಗಳೂರು ಭೇಟಿ ಹಿನ್ನೆಲೆ, ನಿಮ್ಹಾನ್ಸ್ ಸುತ್ತಮುತ್ತ ನೋ ಫ್ಲೈಯಿಂಗ್ ಜೋನ್ ಎಂದು ಘೋಷಣೆ ಮಾಡಲಾಗಿದೆ. 1 ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ಏರ್ಪ್ರಾಫ್ಟ್ ಹಾರಾಟವನ್ನು ನಿಷೇಧಿಸಲಾಗಿದೆ. ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೂ ಏರ್ ಕ್ರಾಫ್ಟ್ ಹಾರಾಟ ನಿಷೇಧ ಮಾಡಿ ಪೊಲೀಸ್ ಕಮಿಷನರ್ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ. ಡ್ರೋನ್, ಯುಎವಿ, ಗ್ಲೀಡರ್ ಏರ್ ಕ್ರಾಫ್ಟ್ ಮತ್ತು ಎಲ್ಲಾ ರೀತಿಯ ಸಣ್ಣ ಏರ್ ಕ್ರಾಫ್ಟ್ ಹಾಗೂ ನಾನ್ ಶೆಡ್ಯೂಲ್ಡ್ ಏರ್ ಕ್ರಾಫ್ಟ್ ಹಾರಾಟ ನಿಷೇಧಗೊಳಿಸಿ ಆದೇಶ ಹೊರಡಿಸಿದ್ದಾರೆ.