ಪೊಲೀಸ್ ಸಬ್ಇನ್ಸ್ಪೆಕ್ಟರ್ 402 ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಶೀಘ್ರದಲ್ಲೇ ದಿನಾಂಕ ಪ್ರಕಟಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ನೂರಕ್ಕೂ ಹೆಚ್ಚು ಆಕಾಂಕ್ಷಿಗಳು ಯುಪಿಎಸ್ಸಿ ಪ್ರಾಥಮಿಕ ಪರೀಕ್ಷೆ ಬರೆದು, ಮುಖ್ಯ ಪರೀಕ್ಷೆಗೆ ಅರ್ಹತೆ ಹೊಂದಿದ್ದಾರೆ.
ಮುಖ್ಯ ಪರೀಕ್ಷೆ ಮತ್ತು ಪಿಎಸ್ಐ ಪರೀಕ್ಷೆ ಸೆಪ್ಟೆಂಬರ್ 22ರಂದು ನಿಗದಿಯಾಗಿದೆ. ಆದ್ದರಿಂದ ಅಭ್ಯರ್ಥಿಗಳು ಒಟ್ಟಿಗೆ ಎರಡು ಪರೀಕ್ಷೆಗಳನ್ನು ಬರೆಯಲು ಸಾಧ್ಯವಾಗುವುದಿಲ್ಲ ಎಂಬ ಕಾರಣಕ್ಕೆ ಸೆಪ್ಟೆಂಬರ್ 28ರಂದು ಪರೀಕ್ಷೆ ಮಾಡಲು ಯೋಜಿಸಲಾಗಿತ್ತು. ಅಂದುಕೂಡ ಯುಪಿಎಸ್ಸಿ ಪರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಪಿಎಸ್ಐ ಪರೀಕ್ಷೆ ಮುಂದೂಡಲಾಗಿದ್ದು, ಶೀಘ್ರದಲ್ಲೇ ಪರೀಕ್ಷೆ ದಿನಾಂಕ ನಿಗದಿಪಡಿಸಿ ತಿಳಿಸಲಾಗುವುದು ಎಂದರು.