ರಾಜ್ಯದಲ್ಲಿ ಮುಂಗಾರು ಬಿರುಸುಗೊಂಡಿದ್ದು, ಮುಂದಿನ 5 ದಿನ ಭಾರೀ ಮಳೆಯ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿಯ ಮೂರು ಜಿಲ್ಲೆಗಳಿಗೂ ಇಂದು ಹಾಗೂ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ನಂತರದ ಮೂರು ದಿನ ಆರೆಂಜ್ ಅಲರ್ಟ್ ಘೋಷಿಸಿದೆ.
ನಿರಂತರ ಮಳೆ ಸುರಿಯುತ್ತಿರುವ ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆಗಳಿಗೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರ ವಹಿಸಲು ಸಲಹೆ ನೀಡಲಾಗಿದೆ.