ಕರ್ನಾಟಕ, ತಮಿಳುನಾಡು ಸೇರಿದಂತೆ ಜಹಲವು ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕ, ತಮಿಳುನಾಡು, ಕೇರಳ, ಗೋವಾ, ಮಹಾರಾಷ್ಟ್ರ, ಅರುಣಾಚಲ ಪ್ರದೇಶ ಮತ್ತು ಗುಜರಾತ್ನಲ್ಲಿ ಇಂದು ಭಾರೀ ಮಳೆಯಾಗಲಿದೆ. ಭಾರೀ ಮಳೆ ಹಿನ್ನೆಲೆ ಈ ರಾಜ್ಯಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಇಂದು ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಮುಂದಿನ 2 ದಿನಗಳಲ್ಲಿ ಅಸ್ಸಾಂ ಮತ್ತು ಮೇಘಾಲಯದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ 13 ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಲಘು ಮಳೆಯಾಗಲಿದೆ.
ಹವಾಮಾನ ಇಲಾಖೆ ವರದಿ ಪ್ರಕಾರ, ನೃಋತ್ಯ ಮುಂಗಾರು ಗುಜರಾತ್, ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ಮಾಹಾರಾಷ್ಟ್ರ, ಬಿಹಾರ ಮತ್ತು ಜಾರ್ಖಂಡ್ನ ಕೆಲವು ಭಾಗಗಳಿಂದ 1 ಅಥವಾ 2 ದಿನಗಳಲ್ಲಿ ಹೊರಡಬಹುದು. ಈಗ ಈ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆ ಇಲ್ಲ. ಇದೇ ಸಮಯದಲ್ಲಿ ಯುಪಿಯ ಹಲವೆಡೆ ಬೆಳಗ್ಗೆ ಲಘು ಮಂಜು ಕೂಡ ಕಂಡುಬರುತ್ತದೆ. ದೆಹಲಿ -ಎನ್ಸಿಆರ್ ಸೇರಿದಂತೆ ರಾಜ್ಯಗಳಲ್ಲಿ ಮುಂಜಾನೆ ಸ್ವಲ್ಪ ಚಳಿಯ ಅನುಭವವಾಗುತ್ತಿದೆ.