ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಇವರ ವಿರುದ್ಧ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಒಂದು ಹಾಗೂ ಸಿಐಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್ಐಆರ್ ಸಲ್ಲಿಕೆಯಾಗಿವೆ.
ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಸಂಬಂಧ ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಪ್ರಕರಣದಲ್ಲಿ ಜೂ.26 ರಂದು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಪ್ರಜ್ವಲ್ ರೇವಣ್ಣಗೆ ಜಾಮೀನು ನಿರಾಕರಿಸಿತ್ತು. ಹಾಗಾಗಿ, ಅವರು ಮಾಮೂಲಿ ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರ ನ್ಯಾಯಪೀಠದ ಮುಂದೆ ಶುಕ್ರವಾರ ಮಧ್ಯಾಹ್ನ ನಡೆಯಲಿದೆ.
ಇನ್ನು, ಸಿಐಡಿ ಪೊಲೀಸರು ದಾಖಲಿಸಿರುವ ಎರಡು ಎಫ್ಐಆರ್ ಗಳ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಇದರೊಂದಿಗೆ ಮೂರು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿರುವ ಪ್ರಜ್ವಲ್ ರೇವಣ್ಣ, ಎಲ್ಲಾ ಅರ್ಜಿಗಳಲ್ಲಿ ಪ್ರಕರಣದ ತನಿಖಾಧಿಕಾರಿ ನಡೆಸುತ್ತಿರುವ ಸಿಐಡಿ ಪೊಲೀಸರನ್ನು ಪ್ರತಿವಾದಿ ಮಾಡಿದ್ದಾರೆ.