ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಸಚಿವ ಸತೀಶ್ ಜಾರಕಿಹೊಳಿ ಅವರ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಹಿಂದೂ ಧರ್ಮ ನಿಂದನೆ ಮೂಲಕ ಅಶಾಂತಿ ಮೂಡಿಸಲು ಯತ್ನ, ಸಮುದಾಯಗಳ ನಡುವೆ ದ್ವೇಷ ಮೂಡಿಸಲು ಪ್ರಯತ್ನಿಸಿದ್ದಾರೆಂದು ವಕೀಲ ಕೆ.ದಿಲೀಪ್ ಕುಮಾರ್ ಅವರು ದಾಖಲಿಸಿದ್ದ ಖಾಸಗಿ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ.
ಪ್ರಕರಣದ ಹಿನ್ನೆಲೆ
2022ರಲ್ಲಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಆಯೋಜಿಸಲಾಗಿದ್ದ ಮಾನವ ಬಂದುತ್ವ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಚಿವ ಸತೀಶ್ ಜಾರಕಿಹೊಳಿ, ಹಿಂದೂ ಎಂಬ ಪದ ಎಲ್ಲಿಂದ ಬಂತು? ಇದು ನಮ್ಮ ಪದವಲ್ಲ ಪರ್ಷಿಯನ್ನಿಂದ ಬಂದಿದ್ದು. ಭಾರತಕ್ಕೂ ಪರ್ಷಿಯನ್ಗೂ ಏನು ಸಂಬಂಧ? ಎಂದು ಪ್ರಶ್ನಿಸಿದ್ದರು. ಜೊತೆಗೆ ಹಿಂದೂ ಭಾರತೀಯ ಪದವೇ ಅಲ್ಲ, ಅದು ಪರ್ಷಿಯನ್ ಪದ, ಹಿಂದೂ ನಮ್ಮದು ಹೇಗೆ ಆಯಿತು ಅನ್ನೋದು ಚರ್ಚೆ ಆಗಬೇಕಿದೆ. ಹಿಂದೂ ಪದದ ಅರ್ಥ ಬಹಳ ಅಶ್ಲೀಲವಾಗಿದೆ. ಅದು ನಿಮಗೆ ತಿಳಿದರೆ ನಾಚಿಕೆ ಆಗುತ್ತೆ. ಎಲ್ಲಿಂದನೋ ಬಂದಿರುವ ಧರ್ಮವನ್ನು ತಂದು ಒತ್ತಾಯಪೂರ್ವಕವಾಗಿ ಹೇರಲಾಗುತ್ತಿದೆ ಎಂದು ಹೇಳಿಕೆ ನೀಡಿದ್ದರು.