ಟೆಸ್ಟ್ ಕ್ರಿಕೆಟ್ನಲ್ಲಿ ಶುಭ್ಮನ್ ಗಿಲ್ ಮತ್ತೊಂದು ಶತಕ ಸಿಡಿಸಿದ್ದಾರೆ. ಈವರೆಗೆ 48 ಟೆಸ್ಟ್ ಇನಿಂಗ್ಸ್ ಆಡಿರುವ ಗಿಲ್ 6 ಅರ್ಧಶತಕ ಹಾಗೂ 5 ಭರ್ಜರಿ ಶತಕಗಳೊಂದಿಗೆ 1500 ಕ್ಕೂ ಅಧಿಕ ರನ್ ಕಲೆಹಾಕಿದ್ದಾರೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಕೊಹ್ಲಿ ನಿರ್ಮಿಸಿದ್ದ ವಿಶೇಷ ದಾಖಲೆಯನ್ನು ಸಹ ಮುರಿದಿದ್ದಾರೆ.
ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಯುವ ದಾಂಡಿಗ ಶುಭ್ಮನ್ ಗಿಲ್ ಭರ್ಜರಿ ಶತಕ ಸಿಡಿಸಿದ್ದಾರೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದ 2ನೇ ಇನಿಂಗ್ಸ್ನಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಗಿಲ್ 161 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಶತಕದೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ಭಾರತೀಯ ಬ್ಯಾಟರ್ಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ.
ಇದಕ್ಕೂ ಮುನ್ನ ದ್ವಿತೀಯ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದರು. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯಲ್ಲಿ ಒಟ್ಟು 62 ಇನಿಂಗ್ಸ್ ಆಡಿರುವ ಕೊಹ್ಲಿ 4 ಶತಕ ಬಾರಿಸಿ ಈ ದಾಖಲೆ ಬರೆದಿದ್ದರು. ಇದೀಗ 5ನೇ ಶತಕದೊಂದಿಗೆ ಶುಭ್ಮನ್ ಗಿಲ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಈವರೆಗೆ 48 ಇನಿಂಗ್ಸ್ ಆಡಿರುವ ಶುಭ್ಮನ್ ಗಿಲ್ 5 ಶತಕ ಸಿಡಿಸಿದ್ದಾರೆ. ಈ ಮೂಲಕ ಡಬ್ಲ್ಯೂಟಿಸಿ ಸರಣಿಯಲ್ಲಿ ಅತ್ಯಧಿಕ ಶತಕ ಬಾರಿಸಿದ 2ನೇ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.
ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ 56 ಇನಿಂಗ್ಸ್ ಆಡಿರುವ ಹಿಟ್ಮ್ಯಾನ್ ಒಟ್ಟು 9 ಶತಕಗಳನ್ನು ಸಿಡಿಸಿದ್ದಾರೆ. ಈ ಮೂಲಕ WTC ಇತಿಹಾಸದಲ್ಲಿ ಅತೀ ಹೆಚ್ಚು ಸೆಂಚುರಿ ಬಾರಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ನಿರ್ಮಿಸಿದ್ದಾರೆ.