ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸೋಮವಾರ ದೆಹಲಿಗೆ ತೆರಳಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸೋಮವಾರ ಸಂಜೆ ದೆಹಲಿಯ ಅವರ ನಿವಾಸದಲ್ಲಿ ನಡ್ಡಾ ಅವರನ್ನು ಭೇಟಿ ಮಾಡಿದ ವಿಜಯೇಂದ್ರ, ಕರ್ನಾಟಕದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ನಡ್ಡಾ ಅವರಿಗೆ ಮಾಹಿತಿ ನೀಡಿದ್ದಾರೆ.
ಅದರಲ್ಲೂ ವಿಶೇಷವಾಗಿ ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ವಾಗ್ದಾಳಿ ಖಂಡಿಸಿ, ಬೆಂಗಳೂರಿನಿಂದ ಮೈಸೂರಿನವರೆಗೆ ನಡೆಸಿದ ʻಮೈಸೂರು ಚಲೋʼ ಯಶಸ್ಸಿನ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಬೃಹತ್ ಪಾದಯಾತ್ರೆ ನಡೆಸಿದ ಪರಿಣಾಮ ರಾಜ್ಯದ ರಾಜಕಾರಣದಲ್ಲಿ ಉಂಟಾದ ವಿದ್ಯಮಾನಗಳ ಬಗ್ಗೆ ನಡ್ಡಾ ಅವರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ, ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಸೆಪ್ಟೆಂಬರ್ 2 ಮತ್ತು 3ರಂದು ದೆಹಲಿಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿದ್ದು, ಈ ಬಗ್ಗೆಯೂ ಅವರು ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.