ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಕಾನೂನು ತಜ್ಞರ ಜೊತೆ ಚರ್ಚೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಜುಲೈ 31ರ ವರೆಗೆ ತಮಿಳುನಾಡಿಗೆ ನಿತ್ಯ 1 ಟಿಎಂಸಿ ನೀರು ಹರಿಸಬೇಕೆಂಬ ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ವಿಚಾರವಾಗಿ ಡಿಸಿಎಂ ಡಿಕೆಶಿ ಉತ್ತರಿಸಿದ್ದಾರೆ. ಕಾವೇರಿ ನೀರಿನ ವಿಚಾರವಾಗಿ ಮುಂದೆ ಏನು ಮಾಡಬೇಕೆಂದು ಅನಿಲ್ ದಿವಾನ್, ಕಾತರಕಿ ಸೇರಿದಂತೆ ಕಾನೂನು ತಜ್ಞರ ತಂಡದ ಜೊತೆ ಚರ್ಚೆ ಮಾಡಿದ್ದು, ನೀರಾವರಿ ಇಲಾಖೆ ಅಧಿಕಾರಿಗಳ ಜೊತೆ ಮಾತುಕತೆ ನಡೆಸುತ್ತೇವೆ ಎಂದರು. ಮುಡಾ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆಶಿ, ಬಿಜೆಪಿಯವರ ಆರೋಪದಲ್ಲಿ ಹುರುಳಿಲ್ಲ. ಸಮಯ ಬಂದಾಗ ನಾವು ಏನು ಉತ್ತರ ನೀಡಬೇಕೋ ನೀಡುತ್ತೇವೆ. ಮುಡಾದಲ್ಲಿ ಏನೇ ಹಗರಣ ನಡೆದಿದ್ದರೂ ಅದು ಬಿಜೆಪಿ ಅವಧಿಯಲ್ಲಿ ನಡೆದಿದೆ. ಈ ರಾಜಕೀಯ ಆರೋಪಗಳನ್ನು ನಾವು ಸಮರ್ಥವಾಗಿ ಎದುರಿಸುತ್ತೇವೆ ಎಂದರು.