ವರದಿ: ಮೂರ್ತಿ , ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್, ನೆಲಮಂಗಲ
ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಪ್ರಾಣ ಕಳೆದುಕೊಂಡ ಹಿನ್ನೆಲೆಯಲ್ಲಿ, ಬೆಂಗಳೂರಿನ ಪ್ರೆಸ್ಟೀಜ್ ಜಿಂದಾಲ್ ಸಿಟಿ ಅಪಾರ್ಟ್ಮೆಂಟ್ ನಿವಾಸಿಗಳು ಮೌನ ಮೆರವಣಿಗೆ ನಡೆಸಿದರು.
ದಾಳಿಯಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಸಿಗಲೆಂದು, ಅವರು ತಮ್ಮ ಮೊಬೈಲ್ ಫೋನ್ ಟಾರ್ಚ್ ಆನ್ ಮಾಡಿ ಶಾಂತಿಯುತ ಮೆರವಣಿಗೆಯಲ್ಲಿ ಭಾಗವಹಿಸಿದರು. ದಾಳಿ ಖಂಡಿಸಿ ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನಿವಾಸಿಗಳು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದರು.
ಈ ಘಟನೆ ಹಿನ್ನೆಲೆ ರಾಷ್ಟ್ರ ರಾಜಕೀಯ ವಲಯದಲ್ಲೂ ತೀವ್ರ ಸ್ಪಂದನೆ ಮೂಡಿದ್ದು, ಪ್ರಧಾನಿ ಮೋದಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಯುತ್ತಿದೆ. ಸಭೆಯ ಆರಂಭದಲ್ಲಿ ಒಂದು ನಿಮಿಷ ಮೌನದಿಂದ ಕಾಶ್ಮೀರದ ದಾಳಿಯಲ್ಲಿ ಮೃತರಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಖರ್ಗೆ, ಡಿಎಂಕೆ, ಎನ್‌ಸಿಪಿ, ಆಪ್ ಸೇರಿದಂತೆ ಹಲವು ಪ್ರಮುಖ ನಾಯಕರು ಪಾಲ್ಗೊಂಡಿದ್ದಾರೆ.
ನಾಯಕರು ಸರ್ವಪಕ್ಷ ಸಭೆಗೆ ಹಾಜರಾಗಿ ಸಭೆ ನಡೆಯುತ್ತಿರುವಾಗಲೇ ಬೆಂಗಳೂರಿನ ಪ್ರೆಸ್ಟೀಜ್ ಜಿಂದಾಲ್ ಸಿಟಿ ಅಪಾರ್ಟ್ಮೆಂಟ್ ನಿವಾಸಿಗಳಿಂದ ಶಾಂತಿ ಕೋರಿ ಮೌನ ಮೆರವಣಿಗೆ ನಡೆಸಿದ್ದಾರೆ.