ಬೆಂಗಳೂರು, ಮಾರ್ಚ್ 20: ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ, ಮಾರ್ಚ್ 23ರಿಂದ ಒಂದು ವಾರದವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಈ ಜತೆಗೆ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆ ಸಾಧ್ಯತೆ ಇದೆ.
ಹವಾಮಾನದಲ್ಲಿ ತೀವ್ರವಾದ ಬದಲಾವಣೆಗಳು ಉಂಟಾಗುತ್ತಿರುವ ಕಾರಣ ಈ ಮಳೆಯ ಮುನ್ಸೂಚನೆ ನೀಡಲಾಗಿದೆ. ನಾಪೊಕ್ಲು ಮತ್ತು ಬಾಳೆಹೊನ್ನೂರು ಪ್ರದೇಶಗಳಲ್ಲಿ ಈಗಾಗಲೇ ಮಳೆ ಆರಂಭವಾಗಿದೆ. ಕಲಬುರಗಿಯಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿ, ರಾಜ್ಯದ ಇತರೆ ಭಾಗಗಳಲ್ಲಿ ತಾಪಮಾನದಲ್ಲಿ ಸತತ ಏರಿಕೆಯಾಗುತ್ತಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶ ಏರಿಕೆ
ಬೆಂಗಳೂರು ನಗರದಲ್ಲಿಯೂ ಉಷ್ಣಾಂಶದಲ್ಲಿ ಏರಿಕೆಯಾಗಿದ್ದು, ಎಚ್.ಎ.ಎಲ್‌ನಲ್ಲಿ 34.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಹಾಗೂ 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಕೆ.ಐ.ಎ.ಎಲ್‌ನಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಮತ್ತು 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.
ಹೊನ್ನಾವರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಮತ್ತು 25.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ, ಪಣಂಬೂರಿನಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಮತ್ತು 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.
ವಿಜಯಪುರದಲ್ಲಿ 38.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಮತ್ತು 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ, ಬೀದರ್‌ನಲ್ಲಿ 38.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಮತ್ತು 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಬಾಗಲಕೋಟೆಯಲ್ಲಿ 39.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಮತ್ತು 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.
ಧಾರವಾಡದಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಮತ್ತು 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ, ಗದಗದಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಮತ್ತು 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಕಲಬುರಗಿಯಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಮತ್ತು 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.
ಮಳೆಯಾದ ಬಳಿಕ ತಾಪಮಾನದಲ್ಲಿ ವ್ಯಾತ್ಯಾಸವಾಗುವ ಸಾಧ್ಯತೆ ಇದ್ದರೂ, ರೈತರು ಮತ್ತು ನಾಗರಿಕರು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯವಾಗಿದೆ. ಬೆಳೆಗಳ ರಕ್ಷಣೆ, ಮನೆಯ ರಕ್ಷಣೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.