ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದಾಗಿ ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕರ್ನಾಟಕ ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಕರ್ನಾಟಕದಿಂದ ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ವಿಶೇಷ ವಿಮಾನ ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಎಕ್ಸ್(X)ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, “ಕರ್ನಾಟಕದಿಂದ ಕಾಶ್ಮೀರಕ್ಕೆ ಪ್ರವಾಸಕ್ಕೆಂದು ತೆರಳಿದ್ದ ಸುಮಾರು 40 ಜನ ಕನ್ನಡಿಗರು ಭಯೋತ್ಪಾದಕ ದಾಳಿಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರೆಲ್ಲರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ನಾವು ಬದ್ಧರಾಗಿದ್ದೇವೆ. ಈ ನಿಟ್ಟಿನಲ್ಲಿ ವಿಶೇಷ ವಿಮಾನ ವ್ಯವಸ್ಥೆಯನ್ನು ಕಲ್ಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ,” ಎಂದು ತಿಳಿಸಿದ್ದಾರೆ.
ಕಾಶ್ಮೀರ ಪ್ರವಾಸಕ್ಕೆಂದು ತೆರಳಿರುವ 40ಕ್ಕೂ ಅಧಿಕ ಕನ್ನಡಿಗರು ಭಯೋತ್ಪಾದಕ ದಾಳಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಅವರೆಲ್ಲರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ವಿಶೇಷ ವಿಮಾನದ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.
ಪ್ರತಿಯೊಬ್ಬ ಕನ್ನಡಿಗನನ್ನು ಮರಳಿ ರಾಜ್ಯಕ್ಕೆ ಕ್ಷೇಮವಾಗಿ ಕರೆತರುವ ಸಂಕಲ್ಪದೊಂದಿಗೆ…
— Siddaramaiah (@siddaramaiah) April 23, 2025
“ಪ್ರತಿಯೊಬ್ಬ ಕನ್ನಡಿಗನನ್ನೂ ಕ್ಷೇಮವಾಗಿ ರಾಜ್ಯಕ್ಕೆ ಮರಳಿ ಕರೆತರುವ ಸಂಕಲ್ಪ ನಮ್ಮದು. ನಮ್ಮ ಸರ್ಕಾರವು ಈ ಕಾರ್ಯಾಚರಣೆಗೆ ಈಗಾಗಲೇ ಇಳಿದಿದೆ. ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ,” ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಪೋಸ್ಟ್‌ನಲ್ಲಿ ಭರವಸೆ ನೀಡಿದ್ದಾರೆ.
ರಾಜ್ಯ ಸರ್ಕಾರವು ಕಾಶ್ಮೀರದಲ್ಲಿರುವ ಕನ್ನಡಿಗರ ಸುರಕ್ಷತೆಗಾಗಿ ತಕ್ಷಣದ ಕ್ರಮಗಳನ್ನು ಕೈಗೊಂಡಿದ್ದು, ಸಂತ್ರಸ್ತರ ಕುಟುಂಬಗಳಿಗೆ ಎಲ್ಲ ರೀತಿಯ ಸಹಾಯವನ್ನು ಒದಗಿಸುವ ಭರವಸೆಯನ್ನು ನೀಡಿದೆ.